ಮನೆ-ನಿವೇಶನ ರಹಿತ ಎಸ್ಸಿ ಕುಟುಂಬಗಳಿಗೆ ತ್ವರಿತ ನಿವೇಶನ ಹಂಚಿಕೆಗೆ ಕ್ರಮ : ಸಚಿವ ಕೋಟ ಶ್ರೀನಿವಾಸ ಪೂಜಾರಿ
Thumbnail
ಉಡುಪಿ : ರಾಜ್ಯದಲ್ಲಿ ಮನೆ ನಿವೇಶನ ಹೊಂದಿರದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳ ಪಟ್ಟಿಮಾಡಿ ಅವರಿಗೆ ತ್ವರಿತವಾಗಿ ನಿವೇಶನಗಳನ್ನು ಒದಗಿಸಲು ನಮ್ಮ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ನಾಲ್ಕು ವಿಭಾಗಗಳ ಒಂದೊಂದು ಜಿಲ್ಲೆಯನ್ನು ಮಾದರಿಯಾಗಿ ಆಯ್ಕೆ ಮಾಡಲಾಗಿದೆ. ರಾಜ್ಯಾದ್ಯಂತ ಪರಿಶಿಷ್ಟ ಜಾತಿಯ ಮನೆ/ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳಿಗೆ ಮನೆ ನಿವೇಶನಗಳನ್ನು ನೀಡಬೇಕು. ಈ ಮಹತ್ವದ ಕಾರ್ಯವನ್ನು ನಡೆಸಲು ಆರಂಭಿಕವಾಗಿ ನಾಲ್ಕು ವಿಭಾಗಗಳಲ್ಲಿ ಅತೀ ಹೆಚ್ಚು ಜನಸಂಖ್ಯೆ ಇರುವ ನಾಲ್ಕು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ, ಮೈಸೂರು ವಿಭಾಗದಲ್ಲಿ ಚಾಮರಾಜ ನಗರ, ಕಲಬುರ್ಗಿ ವಿಭಾಗದಲ್ಲಿ ರಾಯಚೂರು ಮತ್ತು ಬೆಳಗಾವಿ ವಿಭಾಗದಲ್ಲಿ ಹಾವೇರಿ ಜಿಲ್ಲೆಯಲ್ಲಿ ಇದನ್ನು ಪೈಲಟ್ ಆಗಿ ಅನುಷ್ಠಾನಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯದಲ್ಲೀಗ ಒಟ್ಟು 5.46 ಲಕ್ಷ ಕುಟುಂಬಗಳು ಮನೆ ನಿವೇಶನ ಹೊಂದಿಲ್ಲ. ಅವರಿಗೆ ಭೂಮಿ ಕೊಡುವುದು ಸರಕಾರದ ಜವಾಬ್ದಾರಿ. ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆದ್ಯತೆಯಲ್ಲಿ ಶೀಘ್ರ ಮನೆ ಒದಗಿಸಲು, ಆಯ್ದ ಜಿಲ್ಲೆಗಳಲ್ಲಿ ಸರಕಾರಿ ಭೂಮಿ ಲಭ್ಯತೆ, ಮನೆ ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಬಳಿಕ ಪ್ರತೀ ಜಿಲ್ಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಿವೇಶನ ಒದಗಿಸಲು ಮಾರ್ಗಸೂಚಿಗಳಲ್ಲಿ ಸಡಿಲಿಕೆ ಮಾಡಿ, ಫಲಾನುಭವಿಗಳಿಗೆ ಅನುಕೂಲವಾಗುವಂತೆ ಕ್ರಮವಹಿಸಬೇಕೆಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಲಹೆಗಾರ ನಿವೃತ್ತ ಅಧಿಕಾರಿ ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ., ಆಯುಕ್ತ ರಾಕೇಶ್ ಕುಮಾರ್, ರಾಜೀವ್‌ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ಬಸವರಾಜ್, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
26 Apr 2022, 05:07 PM
Category: Kaup
Tags: