ಉಡುಪಿ : ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ
ಉಡುಪಿ : ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶನಿವಾರ ಶಾಸಕರ ಕಚೇರಿ ಉಡುಪಿಯಲ್ಲಿ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮತ್ತು ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ರೋಗಿಗಳಿಗೆ ಸದ್ರಿ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಸಹಕಾರ ಹಾಗೂ ಸಲಹೆಗಳನ್ನು ವೈದ್ಯಾಧಿಕಾರಿಗಳು ನೀಡಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರುವ ವೈದ್ಯಾಧಿಕಾರಿಯವರು ಸ್ಥಳೀಯ ಸಾರ್ವಜನಿಕರ ಹಾಗೂ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಔಷಧೋಪಚಾರವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ತಾಲ್ಲೂಕು ವೈದ್ಯಾಧಿಕಾರಿಗಳಾದ ವಾಸುದೇವ್ ಉಡುಪ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
