ಉಡುಪಿ : ಆರೋಗ್ಯ, ಶಿಕ್ಷಣ ಇಲಾಖೆ ಸೂಚ್ಯಂಕದಲ್ಲಿ ಕುಸಿತ - ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ
Thumbnail
ಉಡುಪಿ : ಜಿಲ್ಲೆಯಲ್ಲಿ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದ ಸೂಚ್ಯಂಕದಲ್ಲಿ ಕುಸಿತ ಕಂಡಿರುವುದು ಅಕ್ಷಮ್ಯ, ಇದಕ್ಕೆ ಅಧಿಕಾರಿಗಳೇ ನೇರ ಹೊಣೆ. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಮೊದಲ ಸ್ಥಾನದಲ್ಲಿ ಇದ್ದ ಜಿಲ್ಲೆಗೆ ಹಿನ್ನಡೆ ಆಗಿರುವುದನ್ನು ಸಹಿಸಲು ಆಗದು. ಜಿಲ್ಲೆ ಮತ್ತೆ ಮೊದಲನೇ ಸ್ಥಾನಕ್ಕೆ ಬರಲೇಬೇಕು, ಇದಕ್ಕೆ ಬೇಕಾದ ಯಾವ ಕ್ರಮಗಳ ಅಗತ್ಯವೋ ಅದನ್ನು ಕಡ್ಡಾಯವಾಗಿ ಮಾಡಲೇಬೇಕು ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಡಿಮಿಡಿಗೊಂಡರು. ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಮಂಗಳವಾರ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, 2015 ರ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18 ನೇ ಸ್ಥಾನಕ್ಕೆ ಕುಸಿತ ಕಂಡಿದೆ. ತಾಯಿ, ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ ಎಂದು ಡಿಎಚ್‌ ಓ ವಿರುದ್ಧ ಅಕ್ರೋಶ ಹೊರಹಾಕಿದರು. ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ನಿಮ್ಮದೇ ಹೊಣೆಗಾರಿಕೆ. ಜಿಲ್ಲೆ ಮತ್ತೆ ಮೊದಲ ಸ್ಥಾನಕ್ಕೆ ಬರಬೇಕು. ಇಲ್ಲದಿದ್ದರೆ ಅಮಾನತ್ತು ಮಾಡಬೇಕಾಗುತ್ತದೆ. ಈ ಬಗ್ಗೆ ನಿಗಾ ಇಟ್ಟು ಸುಧಾರಣೆ ಕಾಣದಿದ್ದರೆ ಡಿಎಚ್‌ಓ ಅವರನ್ನು ಮುಲಾಜಿಲ್ಲದೆ ಅಮಾನತ್ತು ಮಾಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸೂಚನೆ ನೀಡಿದರು. ಇನ್ನೂ ಶೈಕ್ಷಣಿಕ ಸೂಚ್ಯಂಕದಲ್ಲಿ ಜಿಲ್ಲೆ 13 ನೇ ಸ್ಥಾನಕ್ಕೆ ಕುಸಿತ ಕಂಡಿದೆ. ನಿಮಗೆ ನಾಚಿಕೆ, ಬೇಸರ ಆಗುವುದಿಲ್ಲವೇ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ದ ಹರಿಹಾಯ್ದರು. ಬರುವ ದಿನಗಳಲ್ಲಿ ನಿಮ್ಮಲ್ಲಿ ಜಿಲ್ಲೆಯ ಕಾರ್ಯಕ್ಷಮತೆ ಕಾಣದಿದ್ದರೆ ನಿಮ್ಮನ್ನು ಶಾಶ್ವತವಾಗಿ ಮನೆಗೆ ಕಳಹಿಸಬೇಕಾಗುತ್ತದೆ ಖಡಕ್‌ ಎಚ್ಚರಿಕೆ ನೀಡಿದರು. ಅಧಿಕಾರಿಗಳು ನಿರ್ಲಕ್ಷ್ಯ ತೋರಿಸಿದರೆ, ಸ್ಪಂದಿಸುವ ಮನಸ್ಸು ಇಲ್ಲದವರು ಅಧಿಕಾರ ತ್ಯಾಗ ಮಾಡಿ. ಜನರ ಸ್ಪಂದನೆ ಮಾಡುವ ಸಾಕಷ್ಟು ಅಧಿಕಾರಿಗಳು ಇದ್ದಾರೆ. ಅಪರಾಧ ನಿಯಂತ್ರಣ, ಸೈಬರ್‌ ಕ್ರೈಂ ತಡೆಯುವುದು ಪೊಲೀಸ್‌ ಇಲಾಖೆ ಜವಾಬ್ದಾರಿ. ಇದನ್ನು ಪರಿಣಾಮಕಾರಿ ಆಗಿ ನಿರ್ವಹಿಸಬೇಕು. ರಸ್ತೆಗಳನ್ನು ಶೀಘ್ರವೇ ದುರಸ್ತಿಪಡಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದರು. ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ 5 ಲಕ್ಷ ರೂ.ಗಳ ವರೆಗೂ ಪರಿಹಾರ ನೀಡಬೇಕು. ಇದು ಸರಕಾರದ ನಿರ್ಧಾರ. ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ-ಇಲ್ಲವೋ, ಹಕ್ಕು ಪತ್ರ ಇದೆಯೋ-ಇಲ್ಲವೋ ಎನ್ನುವುದನ್ನು ನೋಡದೆ  ಪರಿಹಾರ ನೀಡಿ, ಪುನಃ ಮನೆ ನಿರ್ಮಾಣ ಆಗಬೇಕು. ಮಳೆ ಹಾನಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಮೀಕ್ಷೆ ನಡೆಸಬೇಕು. ಬೆಳೆ ಹಾನಿಗೊಳಗಾದವರಿಗೆ ತಪ್ಪದೆ ಪರಿಹಾರ ಸಿಗಬೇಕು. ಅಡಕೆ ಬೆಳೆಗೆ ಬಂದಿರುವ ಎಲೆಚುಕ್ಕೆ ರೋಗದ ಬಗ್ಗೆ ಕೃಷಿ ವಿಜ್ಞಾನಿಗಳ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಆಗಿರುವ ಕಾಲುಸಂಕಗಳ ದುರಸ್ತಿ ಅಥವಾ ಪುನಃ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಕಾಲುಸಂಕ ದುರಸ್ತಿ ಆಗದೇ ಇರುವುದರಿಂದ ಅನಾಹುತಗಳು ಸಂಭವಿಸದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಸಚಿವ ಮಾಂಕಳ ವೈದ್ಯ, ಶಾಸಕರಾದ ವಿ.ಸುನಿಲ್‌ ಕುಮಾರ್‌, ಯಶ್‌ಪಾಲ್‌ ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಕಿರಣ್‌ ಕೊಡ್ಗಿ, ಗುರುರಾಜ ಗಂಟಿಹೊಳೆ, ವಿಧಾನ ಪರಿಷತ್‌ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿ.ಪಂ. ಸಿಇಒ ಪ್ರಸನ್ನ ಎಚ್‌., ಎಸ್‌ ಪಿ ಅಕ್ಷಯ್‌ ಮಚ್ಚೀಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
01 Aug 2023, 07:43 PM
Category: Kaup
Tags: