ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶಶಿಕಲಾ, ಉಪಾಧ್ಯಕ್ಷರಾಗಿ ಹೇಮಚಂದ್ರ ಆಯ್ಕೆ
ಪಡುಬಿದ್ರಿ: ಇಲ್ಲಿನ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಶಶಿಕಲಾ ಹಾಗೂ ಉಪಾಧ್ಯಕ್ಷರಾಗಿ ಹೇಮಚಂದ್ರ ಆಯ್ಕೆಯಾಗಿದ್ದಾರೆ.
ಶನಿವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.
34 ಸದಸ್ಯ ಬಲದ ಪಡುಬಿದ್ರಿ ಗ್ರಾಮ ಪಂಚಾಯತ್ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಶಶಿಕಲಾ ಹಾಗೂ ಕಾಂಗ್ರೆಸ್ ಬೆಂಬಲಿತೆ ಸುನಂದ ಸಾಲ್ಯಾನ್ ಅವರು ಸ್ಪರ್ಧಿಸಿದ್ದರು. ಶಶಿಕಲಾ ಅವರು 23 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಸುನಂದ ಸಾಲ್ಯಾನ್ 11 ಮತಗಳು ಪಡೆದಿದ್ದರು.
ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಹೇಮಚಂದ್ರ ಹಾಗೂ ಕಾಂಗ್ರೆಸ್ ಬೆಂಬಲಿತ ಖಲಂದರ್ ಶಫಿ ಸ್ಪರ್ಧಿಸಿದ್ದರು. ಹೇಮಚಂದ್ರ 20 ಮತಗಳನ್ನು ಪಡೆದು ಆಯ್ಕೆಯಾಗಿದ್ದು, ಖಲಂದರ್ ಶಫಿ 14 ಮತಗಳನ್ನು ಪಡೆದರು.
ಚುನಾವಣಾಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ವರುಣ್ ನಡೆಸಿಕೊಟ್ಟರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಕ್ಷರಿ ಕೆರಿಮಠ್ ಸಹಕರಿಸಿದ್ದರು.
