ಕಟಪಾಡಿ : ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ
ಕಟಪಾಡಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಮಂಗಳವಾರದಂದು ಕಟಪಾಡಿ ಗ್ರಾಮ ಪಂಚಾಯತ್ ಬಳಿ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಶಾಸಕರು ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು ಎಂದರು.
ಈ ಸಂದರ್ಭ ದೀನ್ ದಯಾಳ್ ಅಂತ್ಯೋದಯ ಯೋಜನೆ ಅಡಿಯಲ್ಲಿ ಸ್ವಸಹಾಯ ಸಂಘಗಳಿಗೆ ಮಂಜೂರಾದ ಸಹಾಯಧನವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾವತಿ, ನಬಾರ್ಡ್ ನ ಸಂಗೀತಾ ಕರ್ತ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿಗಳಾದ ಸಂತೋಷ್, ಕೆನರಾ ಬ್ಯಾಂಕ್ ನ ಎಫ್.ಎಲ್.ಸಿ ಪ್ರದೀಪ್, ಅಂಚೆ ಇಲಾಖೆಯ ಸಂತೋಷ್ ಮಧ್ಯಸ್ಥ, ಕೃಷಿ ಇಲಾಖೆಯ ಅರುಣ್ ಕುಮಾರ್, ವೆಂಕಟೇಶ್, ಜಿಲ್ಲಾ ಆಸ್ಪತ್ರೆಯ ಆರೋಗ್ಯ ಮಿತ್ರದ ಹರೀಶ್, ಕಟಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶುೃತಿ, ಗ್ರಾಮ ಆಡಳಿತಾಧಿಕಾರಿಗಳಾದ ಡ್ಯಾನಿಯಲ್ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
