ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ
ಕಾಪು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2023 -24ನೇ ಸಾಲಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಈ ಕಾಲೇಜು ಉತ್ತಮವಾಗಿ ಬೆಳೆದು ಬರಲು ಹಲವು ಶಿಕ್ಷಣ ಪ್ರೇಮಿಗಳ ಕೊಡುಗೆ ಇದೆ. ವಿದ್ಯಾರ್ಥಿಗಳು ಈ ಶೈಕ್ಷಣಿಕ ಸಂಸ್ಥೆಯ ಮೂಲಕ ಉತ್ತಮ ಶಿಕ್ಷಣ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳು, ಪೋಷಕರು, ಹಲವಾರು ಕೊಡುಗೈ ದಾನಿಗಳ ಮೂಲಕ ಈ ಸಂಸ್ಥೆ ಇನ್ನೂ ಹೆಚ್ಚು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸಿದರು.
ಕಾಪು ದಂಡ ತೀರ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್
ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಮನೋಭಾವದಲ್ಲಿ ಬಹಳಷ್ಟು ಬದಲಾವಣೆಯಾಗುತ್ತಿದ್ದು, ವಿದ್ಯಾರ್ಥಿಗಳು ಹೆಚ್ಚು ಹೊತ್ತು ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದು ಅವರ ಜೀವನದ ದಿಕ್ಕನ್ನು ಬದಲಾಯಿಸಿ ಕಷ್ಟಕ್ಕೆ ಎಡೆ ಮಾಡಿಕೊಡುತ್ತಿದೆ. ವಿದ್ಯಾರ್ಥಿಗಳು ಪೋಷಕರು, ಗುರುಗಳು, ಹಿರಿಯರ, ಮಾರ್ಗದರ್ಶನದಲ್ಲಿ ನಡೆದು ಗುರು ಹಿರಿಯರಿಗೆ ವಿಧೇಯರಾಗಿ ತಮ್ಮ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದರು.
ಸರಕಾರಿ ಪದವಿ ಪೂರ್ವ ಕಾಲೇಜು ಪೊಲಿಪುವಿನ ಉಪನ್ಯಾಸಕ ಸುಧಾಕರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸನ್ಮಾನ/ ಗೌರವ : ಕಾಲೇಜಿನ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿತ ಕರ್ಕೇರ ಮತ್ತು ಇತಿಹಾಸ ವಿಭಾಗದ ಡಾ. ಮೆಹೆಬೂಬ್ ಸಾಬ್ ಡಿಪಿ ಅವರನ್ನು ಈ ಶೈಕ್ಷಣಿಕ ಸಾಲಿನಲ್ಲಿ ಪಿಎಚ್ಡಿ ಪದವಿ ಪಡೆದುದಕ್ಕಾಗಿ ಸನ್ಮಾನಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಯಮುನಪ್ಪ ಭಾರತೀಯ ಸೈನ್ಯಕ್ಕೆ ಆಯ್ಕೆಯಾಗಿರುವುದರಿಂದ ಗುರುತಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವ್ಕರ್ ವಹಿಸಿದ್ದರು.
ಪೋಷಕ -ಶಿಕ್ಷಕರ ಸಂಘದ ಅಧ್ಯಕ್ಷರಾದ ಸುಜಾತ,
ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ದೀಪಿಕಾ ಸುವರ್ಣ, ಸಾಂಸ್ಕೃತಿಕ ಸಂಘದ ಸಂಚಾಲಕ್ಕೆ ಡಾ. ನಾಯನ ಎಲ್ ಎಂ, ಐಕ್ಯೂಎಸ್ ಸಿ ಘಟಕದ ಸಂಚಾಲಕಿ ಡಾ. ರೋಷನೀ ಯಶ್ವಂತ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ಸವಿತಾ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿ ಸಮಿತಿಯ ಅಧ್ಯಕ್ಷರಾದ ಕುಮಾರಿ ಕವಿತಾ ಸ್ವಾಗತಿಸಿದರು. ಕುಮಾರಿ ಶರಣ್ಯ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಸುಶ್ಮಿತಾ ವಂದಿಸಿದರು.
