ಕಾಪು : ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನ - ವ್ಯಸನ ಮುಕ್ತ ದಿನಾಚರಣೆ
ಕಾಪು : ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನವನ್ನು ವ್ಯಸನ ಮುಕ್ತ ದಿನಾಚರಣೆಯಾಗಿ ಕಾಪು ತಾಲ್ಲೂಕು ಆಡಳಿತ ಸೌಧದಲ್ಲಿ ಗುರುವಾರ ಆಚರಿಸಲಾಯಿತು.
ಈ ಸಂದರ್ಭ ಮಾತನಾಡಿದ ತಹಶಿಲ್ದಾರ್ ಡಾ. ಪ್ರತಿಭಾ ಆರ್ ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು, ಅವರ ಬದುಕೇ ನಮಗೆ ಪ್ರೇರಣೆ .
ನಿರಂತರ ಅನ್ನದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ ಸ್ಥಾಪನೆ, ನಿಸರ್ಗ ಚಿಕಿತ್ಸೆ, ಯೋಗ ಕೇಂದ್ರ ಸ್ಥಾಪನೆ, ಶಾಖಾ ಮಠಗಳಿಗೆ ಪ.ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಭೂಮಿಯನ್ನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.
ಡಿ ಡಿ ಎಲ್ ಆರ್ ರವೀಂದ್ರ, ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಮಾತನಾಡಿದರು.
ಈ ಸಂದರ್ಭ ವ್ಯಸನದಿಂದ ದೂರ ಇರುತ್ತೇವೆಂದು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭ ಡಿ ಡಿ ಎಲ್ ಆರ್ ರವೀಂದ್ರ, ಪುರಸಭಾ ಮುಖ್ಯಾಧಿಕಾರಿ ನಾಗರಾಜ್, ಉಪ ತಹಶಿಲ್ದಾರ್ ಗಳಾದ ದೇವಕಿ, ರವಿಕಿರಣ್, ಅಶೋಕ್, ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ತಾಲ್ಲೂಕು ಆಡಳಿತ ಸೌಧದ ಸಿಬ್ಬಂದಿ ಉಪಸ್ಥಿತರಿದ್ದರು.
ಉಪ ತಹಶಿಲ್ದಾರ್ ದೇವಕಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
