ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಡಿಲಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ
Posted On:
25-09-2025 05:18PM
ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ.ಕ. ಉಡುಪಿ ಜಿಲ್ಲೆ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರವನ್ನು ಖ್ಯಾತ ಮನೋವೈದ್ಯ ಹಾಗೂ ಸಾಮಾಜಿಕ ಹೋರಾಟಗಾರ ಡಾ.ಪಿ.ವಿ.ಭಂಡಾರಿ ಅವರಿಗೆ ಉಡುಪಿ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮವನ್ನು ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ವಹಿಸಿದ್ದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಪಿ.ವಿ.ಭಂಡಾರಿ, ಓದು ನನಗೆ ಬದುಕಿನಲ್ಲಿ ಸಾಕಷ್ಟು ಸಹಾಯ ಮಾಡಿದೆ. ನಾಗರಿಕ ಸಮಾಜ ಪ್ರಶ್ನೆ ಮಾಡದಿದ್ದರೆ ಸರಕಾರ ಯಾವುದೇ ಸಮಸ್ಯೆಗೆ ಸ್ಪಂದಿಸುವುದಿಲ್ಲ. ಜನಪ್ರತಿನಿಧಿಗಳು ಕೆಲಸ ಮಾಡದೇ ಇದ್ದಾಗ ಹೋರಾಟ ಮಾಡುವುದು ನಮ್ಮ ಕರ್ತವ್ಯ. ಅವರು ಜನಸೇವಕರೇ ಹೊರತು ನಾಯಕ ರಲ್ಲ. ಶಿಕ್ಷಣ ಮತ್ತು ಆರೋಗ್ಯವನ್ನು ಸರಕಾರ ನಮಗೆ ನೀಡಬೇಕು. ಆದರೆ ಅದು ಇಂದಿಗೂ ಸಾಧ್ಯವಾಗಿಲ್ಲ ಎಂದರು.
ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕರ್ನಾಟಕ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, , ಬಳಗದ ಕಾರ್ಯಾಧ್ಯಕ್ಷ ಕುಮಾರ್, ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹುನಮಂತ ಎಸ್.ಡೊಳ್ಳಿನ ಉಪಸ್ಥಿತರಿದ್ದರು. ನಿರೂಪಕ ಅವಿನಾಶ್ ಕಾಮತ್ ಅಭಿನಂದನಾ ಮಾತುಗಳನ್ನಾಡಿದರು.
ಕಸಾಪ ಉಡುಪಿ ತಾಲೂಕು ಘಟಕಾಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಗದ ಗೌರವಾಧ್ಯಕ್ಷ ಜನಾರ್ದನ ಕೊಡವೂರು ಸ್ವಾಗತಿಸಿದರು. ಸತೀಶ್ ಕೊಡವೂರು ಸನ್ಮಾನ ಪತ್ರ ವಾಚಿಸಿದರು. ರಾಜೇಶ್ ಭಟ್ ಪಣಿಯಾಡಿ ವಂದಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ರಾಘವೇಂದ್ರ ಪ್ರಭು ಕರ್ವಾಲ್ ಕಾರ್ಯಕ್ರಮ ಸಂಯೋಜಿಸಿದರು. ಕಾರ್ಯಕ್ರಮದ ಮೊದಲು ಗಣೇಶ್ ಗಂಗೊಳ್ಳಿ ಮತ್ತು ತಂಡದಿಂದ ಕ್ರಾಂತಿ ಗೀತೆಗಳು ಸಂಪನ್ನಗೊಂಡವು.