ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜಿಲ್ಲಾಧಿಕಾರಿಗಳಿಂದ ಸಂವಿಧಾನ ಪೀಠಿಕೆ ಬೋಧನೆ

Posted On: 26-11-2021 06:05PM

ಉಡುಪಿ : ಸಂವಿಧಾನ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಪೀಠಿಕೆಯನ್ನು ಬೋಧಿಸಿದರು.

ಭಾರತ ದೇಶದ ನಾಗರೀಕರಾದ ನಾವು, ಭಾರತವನ್ನು ಒಂದು ಸಾರ್ವಭೌಮ ಸಮಾಜವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಸಮಸ್ತ ನಾಗರೀಕರಿಗೆ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು, ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ, ಅವರಲ್ಲಿ ಭ್ರಾತೃ ಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿ, ನಮ್ಮ ಸಂವಿಧಾನವನ್ನು ಅಂಗೀಕರಿಸಿದ್ದೇವೆ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ. ಅದರಂತೆ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.

ಭಾರತದ 75 ನೇ ಸ್ವಾತಂತ್ರ್ಯೋತ್ಸವ ಆಜಾದಿ ಕಾ ಅಮೃತ ಮಹೋತ್ಸವದ ಈ ಅವಧಿಯಲ್ಲಿ, ದೇಶದ ಪ್ರತಿಯೊಬ್ಬ ನಾಗರೀಕರೂ ನಮ್ಮ ಸಂವಿಧಾನದಲ್ಲಿರುವ ಸಾಂವಿಧಾನಿಕ ಮೌಲ್ಯಗಳನ್ನು ಅರಿಯಬೇಕು ಮತ್ತು ಅದಕ್ಕೆ ಬದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.