ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ‌: ಕಡತಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಆದೇಶ

Posted On: 26-11-2021 06:11PM

ಉಡುಪಿ : ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಬೋಧಿಸಿ, ನಂತರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕು ಕಚೇರಿಗಳು ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಕಚೇರಿಗೆ ಸಂಬಂಧಿಸಿದ ಕಡತಗಳನ್ನು ಇ-ಕಚೇರಿ ಮೂಲಕವೇ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು 2 ತಿಂಗಳ ಒಳಗೆ ಸಂಪೂರ್ಣ ಇ-ಕಚೇರಿ ಮೂಲಕ ಕಡತಗಳನ್ನು ನಿರ್ವಹಣೆ ಮಾಡಬೇಕು. ಈ ಕುರಿತಂತೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಮತ್ತಿತರ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಡತಗಳನ್ನು ಸೂಕ್ತ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯ ಶೆಟ್ಟಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.