ಮಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ, ಪುನರ್ವಸತಿ ಅಧಿನಿಯಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆ
Posted On:
29-12-2021 07:02PM
ಉಡುಪಿ : ಮಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿಯು ಅತ್ಯಂತ ಹೇಯ ಪದ್ಧತಿಯಾಗಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಮಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿನ ಜನರನ್ನು ಮಾನ್ಯುಯಲ್ ಸ್ಕ್ಯಾವೆಂಜರ್ ಕೆಲಸಕ್ಕೆ ಬಳಸಿಕೊಳ್ಳುವ ಸಂಭವವಿದ್ದು, ಈ ಕಾರ್ಯವನ್ನು ಮಾಡದ ಬಗ್ಗೆ ಅಲ್ಲಿನ ಸಾರ್ವಜನಿಕರಿಗೆ ಬೀದಿ ನಾಟಕ ಸೇರಿದಂತೆ ವಿವಿಧ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಸಮುದಾಯ ಭವನಗಳು ಮತ್ತು ಕಟ್ಟಡಗಳ ಬಳಿ ಜಾಗೃತಿ ಮೂಡಿಸುವ ಜಾಹೀರಾತು ಫಲಕಗಳನ್ನು ಅಳವಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಶೌಚಾಲಯಗಳ ನಿರ್ವಹಣೆಗೆ ಸಕ್ಕಿಂಗ್ ಯಂತ್ರಗಳನ್ನು ಬಳಸುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮೀಕ್ಷೆಯನ್ನು ನಡೆಸಲಾಗಿದ್ದು, ಯಾರೂ ಪತ್ತೆಯಾಗಿರುವುದಿಲ್ಲ. ಈಗಾಗಲೇ ಯಾರಾದರೂ ಮಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯವನ್ನು ನಿರ್ವಹಿಸಿದ್ದಲ್ಲಿ ಅವರ ವಿವರಗಳನ್ನು ಸಂಗ್ರಹಿಸಿ, ಅವರಿಗೆ ಸೂಕ್ತ ಪುನರ್ವಸತಿ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಅತಂಹ ವ್ಯಕ್ತಿಗಳಿಗೆ ಸಕ್ಕಿಂಗ್ ವಾಹನಗಳನ್ನು ಖರೀದಿಸಲು ಧನಸಹಾಯ ಮತ್ತಿತರ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.
ಕೊಂಕಣ ರೈಲ್ವೆಯಲ್ಲಿ ಯಾವುದೇ ಮಾನ್ಯುಯಲ್ ಸ್ಕಾö್ಯವೆಂಜರ್ಗಳು ಕಾರ್ಯ ನಿರ್ವಹಿಸುತ್ತಿಲ್ಲ. ಸಫಾಯಿ ಕರ್ಮಚಾರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಸಮವಸ್ತ್ರ, 2 ಡೋಸ್ ಕೋವಿಡ್ ಲಸಿಕೆ, ಎಲ್ಲಾ ರೀತಿಯ ಅಗತ್ಯ ಸುರಕ್ಷಾ ಉಪಕರಣಗಳನ್ನು ಒದಗಿಸಲಾಗಿದೆ ಎಂದು ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ ತಿಳಿಸಿದರು.
ಮಾನ್ಯುಯಲ್ ಸ್ಕ್ಯಾವೆಂಜರ್ಗಳನ್ನು ಬಳಸುವುದೂ ಸಹ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಅರಿವು ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಎಎಸ್ಪಿ ಕುಮಾರ ಚಂದ್ರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.