ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ

Posted On: 10-01-2022 08:11PM

ಉಡುಪಿ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಸಹ ಕೋವಿಡ್ -19 ಮುನ್ನೆಚ್ಚರಿಕಾ ಡೋಸ್ ತಪ್ಪದೇ ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ, ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಭಾಯಿಸಲು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರ ಸೇವೆಯು ಅತ್ಯಂತ ಅಗತ್ಯವಾಗಿದ್ದು, ಇವರಿಗೆ ಕೋವಿಡ್ನಿಂದ ರಕ್ಷಣೆ ನೀಡಲು ಮತ್ತು 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಕೋವಿಡ್ನಿಂದ ಹೆಚ್ಚಿನ ಅಪಾಯವಾಗುವುದನ್ನು ತಪ್ಪಿಸಲು ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕೆ ನೀಡುವಲ್ಲಿ ಅತ್ಯಂತ ಹೆಚ್ಚಿನ ಪ್ರಗತಿ ಆಗಿದ್ದು, ಮುನ್ನೆಚ್ಚರಿಕಾ ಡೋಸ್ ನೀಡುವಲ್ಲಿ ಸಹ ಸಂಪೂರ್ಣ ಗುರಿ ಸಾಧಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಜಿಲ್ಲೆಯಲ್ಲಿ ಈ ಹಿಂದಿನ ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಪ್ರಸ್ತುತ 3 ನೇ ಅಲೆಯು ಹರಡಲಾರಂಭಿಸಿದ್ದು, ಪ್ರತಿಯೊಬ್ಬರೂ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಚಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಕೋವಿಡ್ ಲಸಿಕಾ ಉಸ್ತುವಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ.ಚಂದ್ರಶೇಖರ ಅಡಿಗ, ಡಾ.ವೇಣುಗೋಪಾಲ, ಮತ್ತಿತರರು ಉಪಸ್ಥಿತರಿದ್ದರು.