ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ - ಪೂರ್ವಭಾವಿ ಸಭೆ

Posted On: 07-04-2022 09:20PM

ಉಡುಪಿ : ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 11 ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆಯಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ಪೂರ್ವಭಾವಿ ಸಭೆ ಇಂದು ನಡೆಯಿತು.

ಮುಖ್ಯಮಂತ್ರಿಗಳು ಏಪ್ರಿಲ್ 11 ರಂದು ಬೆಳಗ್ಗೆ 12 ಗಂಟೆಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 2.30 ಕ್ಕೆ ಉಡುಪಿಯಲ್ಲಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಲಿದ್ದು, ಗ್ರಂಥಾಲಯದಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಪ್ರತಿಮೆ ಅನಾವರಣ ಮಾಡಲಿದ್ದು, ಗ್ರಂಥಾಲಯಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ನಿರ್ಮಿತಿ ಕೇಂದ್ರ ಮತ್ತು ಜಿಲ್ಲಾ ಗ್ರಂಥಾಲಯ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹೇಳಿದರು.

ನಂತರ 3.30 ಕ್ಕೆ ಬನ್ನಂಜೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟಿಸಲಿದ್ದು, ನಂತರ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಪಘಾತ ರಹಿತ ಬಸ್ ಚಾಲನೆ ಮಾಡಿದ ಚಾಲಕರಿಗೆ ಪ್ರಶಸ್ತಿ ವಿತರಣೆ ಮಾಡಲಿದ್ದು, ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಹೇಳಿದರು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.