ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿ : ಮಟ್ಟಾರು ರತ್ನಾಕರ ಹೆಗ್ಡೆ

Posted On: 21-06-2022 09:43PM

ಉಡುಪಿ : ಇಂದಿನ ಯಾಂತ್ರಿಕ ಬದುಕಿನಲ್ಲಿ, ದೇಹಕ್ಕೆ ಸೂಕ್ತ ವ್ಯಾಯಾಮ ದೊರೆಯದೇ, ನಾವುಗಳು ಅನೇಕ ರೋಗಗಳಿಂದ ಬಳಲುತ್ತಿದ್ದು, ದೈನಂದಿನ ಬದುಕಿನಲ್ಲಿ ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗಲಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠ ರಾಜಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪರ್ಯಾಯ ಕೃಷ್ಣಾಪುರ ಮಠ ಉಡುಪಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರಯತ್ನದಿಂದಾಗಿ ಇಂದು ಯೋಗವು ಇಡೀ ವಿಶ್ವಕ್ಕೆ ಹರಡಿದ್ದು, ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ದಿನದ ಯೋಗಾಭ್ಯಾಸದಿಂದ ಉತ್ತಮ ಆರೋಗ್ಯವಂತರಾಗಿ ಆಸ್ಪತ್ರೆಗಳಿಂದ ದೂರ ಉಳಿಯಲು ಸಾಧ್ಯವಾಗಲಿದೆ. ಯೋಗಾಭ್ಯಾಸ ನಿತ್ಯ ಜೀವನದ ಭಾಗವಾಗಬೇಕು ಎಂದರು. ಯೋಗ ಭಾರತೀಯ ಪ್ರಾಚೀನ ಪರಂಪರೆಯ ಅತ್ಯಮೂಲ್ಯ ಕೊಡುಗೆಯಾಗಿದೆ. ಯೋಗಾಭ್ಯಾಸವನ್ನು ವಿಶ್ವದೆಲ್ಲೆಡೆ ಅನುಸರಿಸುತ್ತಿದ್ದಾರೆ. ಮುಂದುವರೆದ ದೇಶಗಳಲ್ಲೊಂದಾದ ಅಮೇರಿಕದಲ್ಲಿ ಸಹ ಯೋಗದ ಸೆಂಟರುಗಳು ನಿರಂತರವಾಗಿವೆ ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಯೋಗವು ವಿಶ್ವಕ್ಕೆ ಭಾರತ ನೀಡಿರುವ ಅತ್ಯುತ್ತಮ ಕೊಡುಗೆ. ಯೋಗದ ಮೂಲಕ ಪ್ರತಿಯೊಬ್ಬರೂ ತಮ್ಮನ್ನು ತಾವು ಅರಿತುಕೊಳ್ಳಲು ಹಾಗೂ ಉತ್ತಮ ಮಾನವೀಯ ಮೌಲ್ಯಗಳನ್ನು ರೂಡಿಸಿಕೊಳ್ಳಲು ಸಾಧ್ಯ. ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಯೋಗ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಯೋಗಾಸನದ ವಿವಿಧ ಆಸನಗಳನ್ನು ಅಭ್ಯಾಸ ಮಾಡಲಾಯಿತು. ಯೋಗ ಶಿಕ್ಷಕ ಬಿರಾದರ್ ಯೋಗ ಪ್ರಾತ್ಯಕ್ಷಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಜಿಲ್ಲಾ ಸಂಚಾಲಕ ಚಂದ್ರಶೇಖರ್ ಹಾಗೂ ಮತ್ತಿತರರು ಭಾಗವಹಿಸಿದ್ದರು. ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಸ್ವಾಗತಿಸಿದರು.