ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜಿಲ್ಲೆಯ ಅಸಂಘಟಿತ ಕಾರ್ಮಿಕರನ್ನು ಪಿಂಚಣಿ ಯೋಜನೆಗೆ ಸೇರ್ಪಡೆ ಮಾಡಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 15-07-2022 08:40PM

ಉಡುಪಿ : ಜಿಲ್ಲೆಯಲ್ಲಿನ ಎಲ್ಲಾ ಅರ್ಹ ಅಸಂಘಟಿತ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆ ಮಾಡಲು ಹಾಗೂ ಇ-ಶ್ರಮ್ ಯೋಜನೆಯಲ್ಲಿ ನೋಂದಣಿ ಮಾಡುವಂತೆ ಕಾರ್ಮಿಕ ಇಲಾಖೆ ಮತ್ತು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ನಿರ್ದೇಶನ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಹಾಗೂ ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ಇ-ಶ್ರಮ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 18-40 ವರ್ಷದೊಳಗಿನ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಅಸಂಘಟಿತ ಕಾರ್ಮಿಕರನ್ನು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆ ಮಾಡುವ ಕುರಿತಂತೆ ಅಸಂಘಟಿತ ಕಾರ್ಮಿಕರ ವೃತ್ತಿವಾರು ಸಂಘಗಳೊಂದಿಗೆ ಸಮಾಲೋಚನೆ ನಡೆಸಿ, ನಿಗಧಿತ ಸ್ಥಳ ಮತ್ತು ದಿನಾಂಕವನ್ನು ನಿಗದಿಪಡಿಸಿಕೊಂಡು ಕಾರ್ಯಕ್ರಮ ಆಯೋಜಿಸಿ, ಎಲ್ಲಾ ಕಾರ್ಮಿಕರಿಗೆ ಈ ಯೋಜನೆಯ ಪ್ರಯೋಜನಗಳ ಕುರಿತು ಅರಿವು ಮೂಡಿಸಿ, ಸ್ಥಳದಲ್ಲೇ ನೋಂದಣಿ ಕಾರ್ಯವನ್ನು ಮಾಡುವ ಮೂಲಕ ಪಿಂಚಣಿ ಸೌಲಭ್ಯ ಪಡೆಯಲು ಯೋಜನೆಗೆ ಸೇರ್ಪಡೆ ಮಾಡುವಂತೆ ಹೇಳಿದರು. ಕಾರ್ಮಿಕರನ್ನು ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಕಾರ್ಯಕ್ರಮ ಆಯೋಜನೆಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ಗಳು ತಮ್ಮ ವ್ಯಾಪ್ತಿಯಲ್ಲಿ ನಿಗಧಿತ ಸ್ಥಳ ಗುರುತಿಸಿ ಎಲ್ಲಾ ಅಗತ್ಯ ಸಹಕಾರವನ್ನು ನೀಡಬೇಕು ಹಾಗೂ ಈ ಕಾರ್ಯಕ್ರಮಕ್ಕೆ ವಿವಿಧ ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆಯುವಂತೆ ತಿಳಿಸಿದರು.

ಜಿಲ್ಲೆಯ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಯೋಜನೆಯಲ್ಲಿ ನೊಂದಣಿ ಮಾಡುವ ಕುರಿತಂತೆ ಎಲ್ಲಾ ಇಲಾಖೆಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಮಾಹಿತಿ ನೀಡಬೇಕು. ಅಲ್ಲದೇ ನೋಂದಣಿ ಶಿಬಿರಗಳನ್ನು ಆಯೋಜಿಸಿ, ಇ-ಶ್ರಮ್ ನೋಂದಣಿಯ ಪ್ರಯೋಜನಗಳ ಬಗ್ಗೆ ಕಾರ್ಮಿಕ ಇಲಾಖೆ ಮತ್ತು ಅಸಂಘಟಿತ ಕಾರ್ಮಿಕ ವಲಯದ ವಿವಿಧ ವೃತ್ತಿಗಳ ನಾಮ ನಿರ್ದೇಶಿತ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿನ ಕಾರ್ಮಿಕರಿಗೆ ಅಗತ್ಯ ಮಾಹಿತಿ ನೀಡಬೇಕು ಎಂದರು. ಜುಲೈ 25 ರ ನಂತರ ಜಿಲ್ಲೆಯಾದ್ಯಂತ ಕಾರ್ಮಿಕರ ಇ-ಶ್ರಮ್ ನೊಂದಣಿ ಮತ್ತು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಯೋಜನೆಗೆ ಸೇರ್ಪಡೆ ಮಾಡುವ ಕುರಿತಂತೆ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿ, ಅರ್ಹ ಎಲ್ಲಾ ಕಾರ್ಮಿಕರನ್ನು ನೊಂದಣಿ ಮಾಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹಾಗೂ ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಸ್ವ-ನಿಧಿ ಯೋಜನೆ ಕುರಿತೂ ಸಹ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು. ಪಿಂಚಣಿ ಯೋಜನೆಗೆ ಸೇರ್ಪಡೆಗೊಳ್ಳಲು ಹಾಗೂ ಇ-ಶ್ರಮ್ನಲ್ಲಿ ನೋಂದಾಯಿಸಲು ಕಾರ್ಮಿಕರು ಶಿಬಿರಗಳಲ್ಲಿ ಮಾತ್ರವಲ್ಲದೇ ತಮ್ಮ ಸಮೀಪದ ಕಾಮನ್ ಸರ್ವೀಸ್ ಸೆಂಟರ್ಗಳಲ್ಲೂ ಸಹ ನೋಂದಾಯಿಸಬಹುದಾಗಿದೆ ಎಂದರು. ಅಸಂಘಟಿತ ಕಾರ್ಮಿಕ ವಲಯದಲ್ಲಿನ ಬೀದಿ ಬದಿ ವ್ಯಾಪಾರಿಗಳು, ಹಮಾಲಿಗಳು, ಮನೆ ಕೆಲಸ ಮಾಡುವವರು, ರಿಕ್ಷಾ ಚಾಲಕರು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಗೃಹ ಆಧಾರಿತ ಕಾರ್ಮಿಕರು ಸೇರಿದಂತೆ ಇತರೆ ವಿವಿಧ ವೃತ್ತಿಯಲ್ಲಿರುವವರು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ ಪಿಂಚಣಿ ಯೋಜನೆಯಲ್ಲಿ ಸೇರ್ಪಡೆಯಾಗುವ ಮೂಲಕ 60 ವರ್ಷದ ನಂತರ ಕನಿಷ್ಠ 3000 ರೂ. ಖಚಿತ ಮಾಸಿಕ ಪಿಂಚಣಿ ಪಡೆಯಲು ಸಾಧ್ಯವಾಗಲಿದೆ.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ವಿವಿಧ ಅನುಷ್ಠಾನಾಧಿಕಾರಿಗಳು ಹಾಗೂ ಅಸಂಘಟಿತ ಕಾರ್ಮಿಕ ವಲಯದ ವಿವಿಧ ವೃತ್ತಿಗಳ ನಾಮ ನಿರ್ದೇಶಿತ ಸದಸ್ಯರುಗಳು ಉಪಸ್ಥಿತರಿದ್ದರು