ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಸುರಕ್ಷತೆ ಮತ್ತು ಸುಗಮ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಎಲ್ಲಾ ಸಿದ್ದತೆ

Posted On: 24-06-2020 03:35PM

ಉಡುಪಿ ಜೂನ್ 24 (ಕರ್ನಾಟಕ ವಾರ್ತೆ): ಉಡುಪಿ ಜಿಲ್ಲೆಯಲ್ಲಿ ಜೂನ್ 25 ರಿಂದ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸುಗಮವಾಗಿ ಪರೀಕ್ಷೆ ನಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ, ಉಡುಪಿಯ ವಳಕಾಡು ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಸುರಕ್ಷಿತ ಮತ್ತು ಸುಗಮವಾಗಿ ನಡೆಸುವ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಜಿಲ್ಲಾ ಪಂಚಾಯತ್ ಸಿಇಓ , ಡಿಡಿಪಿಐ ಮತ್ತು ನಾನು ಹಲವು ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ, ಕಂಟೋನ್ಮೆಟ್ ಝೋನ್ ನಿಂದ ಬರುವ 4 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ, ಕ್ವಾರಂಟೈನ್ ಗೆ ಬಳಸಿರುವ ಶಾಲೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಅಗತ್ಯ ಬಸ್ ವ್ಯವಸ್ಥೆ ಮಾಡಲಾಗಿದ್ದು, 10 ಪರೀಕ್ಷಾ ಕೇಂದ್ರಗಳನ್ನು ಹೆಚ್ಚುವರಿಯಾಗಿ ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಶೀಲಿಸಿ ಪ್ರವೇಶ ನೀಡಲಾಗುವುದು, ಜ್ವರದ ಲಕ್ಷಣಗಳಿದ್ದ ಮಕ್ಕಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿರು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ವಿಧಿಸಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶವಿಲ್ಲ, ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಶಿಕ್ಷಕರಿಗೆ ಮಾತ್ರ ಪ್ರವೇಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಡಿಡಿಪಿಐ ಶೇಷ ಶಯನ ಕಾರಿಂಜ, ವಳಕಾಡು ಶಾಲೆಯ ಮುಖ್ಯೋಪಧ್ಯಾಯಿನಿ ನಿರ್ಮಲಾ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.