ಮೇ 20 ಮತ್ತು 21 : ಉಡುಪಿ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ಬರೆಯಲಿದ್ದಾರೆ 5712 ವಿದ್ಯಾರ್ಥಿಗಳು
Posted On:
19-05-2023 08:10PM
ಉಡುಪಿ : ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21 ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 5712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಪ್ರಸನ್ನ ಹೆಚ್ ತಿಳಿಸಿದರು.
ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, 2023 ನೇ ಸಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸೂಚನೆ ನೀಡಿದರು.
ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾ ಗಳ ಅಳವಡಿಕೆ ಮತ್ತು ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದರು.
ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆಯಾಗಿ ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಮತ್ತು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ತುಂಬು ತೋಳಿನ ಶರ್ಟ್ ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರುವಂತೆ ತಿಳಿಸಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ, ಪರೀಕ್ಷೆಯನ್ನು ಸಮರ್ಥವಾಗಿ ಮತ್ತು ಅತ್ಯಂತ ಸುವ್ಯವಸ್ಥಿತವಾಗಿ ನಡೆಸುವಂತೆ ನಿರ್ದೇಶನ ನೀಡಿದರು.