ಜುಲೈ 8 : ರಾಜ್ಯದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Posted On:
05-07-2023 06:33PM
ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ -2023 ಕಾರ್ಯಕ್ರಮವನ್ನು ಜು.8ರಂದು ಮಧ್ಯಾಹ್ನ 2 ಗಂಟೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕಾರ್ಯಕ್ರಮವನ್ನು ಕರ್ನಾಟಕದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿರುವರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಿರುವರು ಎಂದರು.
ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ, ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಉಡುಪಿ ಶಾಸಕ ಯಶ್ಪಾಲ್ ಎಸ್.ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್, ಮಣಿಪಾಲ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಭಾಗವಹಿಸಲಿರುವರು.
ಸಭಾ ಕಾರ್ಯಕ್ರಮಕ್ಕೆ ಮೊದಲು ಮಧ್ಯಾಹ್ನ 1.30ಕ್ಕೆ ಕಲಾ ಮಯಂ ತಂಡದಿಂದ ಜಾನಪದ ಹಾಡುಗಾರಿಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ಪತ್ರಕರ್ತರ ಮಕ್ಕಳು, ಹೆತ್ತವರು, ಜಿಲ್ಲಾ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಸುಮಾರು 300 ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಜುಲೈ 8ರಂದು ಬೆಳಿಗ್ಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸಭೆಯು ಉಡುಪಿ ಜಿಲ್ಲಾ ಸಂಘದ ಆತಿಥ್ಯದಲ್ಲಿ ಉಡುಪಿ ಐಎಂಎ ಭವನದಲ್ಲಿ ಜರಗಲಿದೆ ಎಂದು ಅವರು ಮಾಹಿತಿ ನೀಡಿದರು.
ಸಂಘದ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು.