ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ; ಶಾಶ್ವತ ಪರಿಹಾರದ ಭರವಸೆ

Posted On: 08-07-2023 10:49PM

ಪಡುಬಿದ್ರಿ : ಉಡುಪಿ ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಇಂದು ಪಡುಬಿದ್ರಿಯ ಕಾಡಿಪಟ್ಣದಲ್ಲಿ ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಸಮುದ್ರ ಕೊರೆತ ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಶಾಶ್ವತ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು. ಜಿಲ್ಲೆಯಲ್ಲಿ ಈ ಬಾರಿ ತಡವಾಗಿ ಮಳೆ ಆರಂಭಗೊಂಡಿದ್ದರು ಸಹ ಪ್ರಾಕೃತಿಕ ವಿಕೋಪದಿಂದ ಇದುವರೆಗೆ ಏಳು ಮಂದಿ ಮೃತಪಟ್ಟಿದ್ದು ಇವರ ಕುಟುಂಬದವರಿಗೆ ತಲಾ ರೂ. ಐದು ಲಕ್ಷಗಳ ಪರಿಹಾರವನ್ನು ವಿತರಿಸಲಾಗಿದೆ ಜಿಲ್ಲೆಯಲ್ಲಿ ಮಳೆಯಿಂದ ಜೀವ ಹಾನಿ ಸಂಭವಿಸದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮಳೆಯಿಂದ ಮಾನವ ಜೀವ ಹಾನಿ,ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು ಜಿಲ್ಲೆಯಲ್ಲಿ ಕಾಲು ಸಂಕ ಗಳ ನಿರ್ಮಾಣ ಮತ್ತು ಕಿಂಡಿ ಅಣೆಕಟ್ಟು ನಿರ್ಮಾಣದ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ, ಅಶೋಕ್ ಕುಮಾರ್ ಕೊಡವೂರು, ಉದಯಕುಮಾರ್ ಶೆಟ್ಟಿ, ನವೀನ್ ಚಂದ್ರ ಜೆ.ಶೆಟ್ಟಿ, ರಾಜಶೇಖರ ಕೋಟ್ಯಾನ್, ಶರ್ಫುದ್ದೀನ್, ಶಿವ ಪ್ರಸಾದ್ ಶೆಟ್ಟಿ ಎರ್ಮಾಳ್, ದೀಪಕ್ ಎರ್ಮಾಳ್, ಕಿಶೋರ್ ಕುಮಾರ್ ಎರ್ಮಾಳ್, ಗಣೇಶ್ ಕೋಟ್ಯಾನ್, ನವೀನ್ ಎನ್.ಶೆಟ್ಟಿ, ರಮೀಜ್ ಹುಸೇನ್, ಜ್ಯೋತಿ ಮೆನನ್, ಫರ್ಜಾನ, ಸಂಜಯ್, ನಿಯಾಜ್, ಆಶಾ ಕಟಪಾಡಿ, ತಸ್ನೀನ್ ಅರ, ಕರುಣಾಕರ್ ಪೂಜಾರಿ, ಹಸನ್ ಮತ್ತಿತರರು ಉಪಸ್ಥಿತರಿದ್ದರು.