ಕಾಪು : ಯಕ್ಷ ಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಕಾಪು ವಿಧಾನಸಭಾ ಕ್ಷೇತ್ರದ ಇದರ ವತಿಯಿಂದ ಕಾಪುವಿನ ಉಳಿಯಾರಗೋಳಿಯ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಯ ಫ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಗೆ ಶನಿವಾರ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಶಾಲಾ ವಿದ್ಯಾರ್ಥಿಗಳಲ್ಲಿ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸುವುದರ ಜೊತೆಗೆ ಅವರ ವಾಕ್ ಚಾತುರ್ಯವನ್ನು ಹೆಚ್ಚಿಸಿಕೊಳ್ಳಲು ಜೊತೆಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಯಕ್ಷಗಾನ ಒಂದು ಉತ್ತಮ ವೇದಿಕೆಯಾಗಿದೆ. ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಇವರ ಮೂಲಕ ಈ ವರ್ಷದಿಂದ ಕಾಪು ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 15 ಶಾಲೆಗಳಲ್ಲಿ ಯಕ್ಷಗಾನ ತರಬೇತಿಯನ್ನು ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ದಂಡತೀರ್ಥ ವಿದ್ಯಾಸಂಸ್ಥೆಯ ಸಂಚಾಲಕರಾದ ಡಾ. ಕೆ. ಪ್ರಶಾಂತ್ ಶೆಟ್ಟಿ, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್, ಉಪಾಧ್ಯಕ್ಷರಾದ ವಿ.ಜಿ ಶೆಟ್ಟಿ, ಯಕ್ಷ ಶಿಕ್ಷಣ ಟ್ರಸ್ಟ್ ರಿ. ಉಡುಪಿ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮಧುಕರ್, ಪ್ರಾಂಶುಪಾಲರಾದ ಮರೀನ ಸರೋಜ, ಮುಖ್ಯೋಪಾಧ್ಯಾಯರಾದ ಚಿತ್ರಲೇಖ ಟಿ ಶೆಟ್ಟಿ, ಯಕ್ಷಗಾನ ಗುರುಗಳಾದ ಮಂಜುನಾಥ್, ಶಿವಣ್ಣ ಬಾಯರ್ ಉಪಸ್ಥಿತರಿದ್ದರು.