ಉಡುಪಿ : ಕಾಲೇಜ್ ಟಾಯ್ಲೆಟ್ ನಲ್ಲಿ ವಿಡಿಯೋ ಪ್ರಕರಣ - ಆಡಳಿತ ಮಂಡಳಿ, ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು
Posted On:
26-07-2023 03:26PM
ಉಡುಪಿ : ಇಲ್ಲಿನ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ತೆಗೆದು ವಾಟ್ಸಪ್ ಗುಂಪುಗಳಿಗೆ ಶೇರ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ನಿನ್ನೆಯಷ್ಟೇ ಉಡುಪಿ ಎಸ್ಪಿ ಪತ್ರಿಕಾಗೋಷ್ಠಿಯಲ್ಲಿ ಈ ತರಹದ ಯಾವುದೇ ವಿಡಿಯೋ ವೈರಲ್ ಆಗಿಲ್ಲ, ತಮಾಷೆಗಾಗಿ ವಿಡಿಯೋ ಮಾಡಲಾಗಿದ್ದು, ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಆ ಬಳಿಕ ಕಾಲೇಜು ಆಡಳಿತ ಮಂಡಳಿಯು ಪತ್ರಿಕಾಗೋಷ್ಠಿ ನಡೆಸಿ ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಲಾಗಿದ್ದು, ಸಂತ್ರಸ್ತ ವಿದ್ಯಾರ್ಥಿನಿ ದೂರು ನೀಡಲು ನಿರಾಕರಿಸಿದ್ದಾರೆ. ಅಲ್ಲದೇ ವಿಡಿಯೋ ಡಿಲೀಟ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ವೀಡಿಯೋ ಮಾಡಿದ ಮೂವರು ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು ಐಪಿಸಿ ಸೆಕ್ಷನ್ 509, 204, 175, 34 ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಪ್ರಕರಣವು ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ರಾಷ್ಟ್ರೀಯ ಮಹಿಳಾ ಆಯೋಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂದೇ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಟ್ವೀಟ್ ಮಾಡಿದ್ದಾರೆ.