ಪಲಿಮಾರು: ವಿದ್ಯುತ್ ಲೈನ್ ಯೋಜನೆ - ಇನ್ನದಲ್ಲಿ ಬೃಹತ್ ಪ್ರತಿಭಟನೆ ; ತಾತ್ಕಾಲಿಕ ಸ್ಥಗಿತಕ್ಕೆ ಆದೇಶ
Posted On:
13-06-2024 06:44AM
ಪಲಿಮಾರು : ಇನ್ನ ಗ್ರಾಮ ಪಂಚಾಯಿತಿ ಬಳಿ ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ವಿರೋಧಿ ಹೋರಾಟ ಸಮಿತಿ ಮತ್ತು ಸುತ್ತಮುತ್ತಲಿನ ಯೋಜನಾ ಸಂತ್ರಸ್ಥರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರೈತ ಪರ ಸಂಘ, ಸಂಸ್ಥೆಗಳು ಬುಧವಾರ ಬೃಹತ್ ಪ್ರತಿಭಟನಾ ಸಭೆ ನಡೆಸಿದರು.
ಈ ಸಂದರ್ಭ ಪ್ರತಿಭನಾಕಾರರು ಹಕ್ಕೊತ್ತಾಯ ಮಂಡಿಸಿದರು. ಪ್ರತಿಭನಾ ಸ್ಥಳಕ್ಕೆ ಆಗಮಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್ ಯೋಜನೆಯನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಕಾಮಗಾರಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದರು.
ಕೃಷಿಕರಿಗೆ ತೊಂದರೆ ಉಂಟು ಮಾಡುವ ಯಾವುದೇ ಯೋಜನೆಗಳಿಗೆ ಅವಕಾಶ ನೀಡುವುದಿಲ್ಲ. ಈ ಬಗ್ಗೆ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರೊಂದಿಗೆ ಮಾತನಾಡುತ್ತೇನೆ. ಆ ಬಳಿಕ ಸಭೆ ಎಲ್ಲರನ್ನೂ ಸೇರಿಸಿ ಸಭೆ ನಡೆಸುವುದಾಗಿ ಹೇಳಿದರು. ಈ ಯೋಜನೆಗೆ ಎರಡು ವರ್ಷಗಳ ಹಿಂದೆಯೇ ಒಪ್ಪಿಗೆ ಸಿಕ್ಕಿತ್ತು. ಇಲ್ಲಿನ ಸ್ಥಳೀಯ ಶಾಸಕರು ಒಪ್ಪಿಗೆ ನೀಡುವ ಸಂದರ್ಭದಲ್ಲಿ ಇಂಧನ ಸಚಿವರಾಗಿದ್ದರು. ಮುಂದಿನ ಭವಿಷ್ಯಕ್ಕಾಗಿ ಅಭಿವೃದ್ಧಿ ಬೇಕು. ಆದರೆ ಜನರ ಜೀನವದಲ್ಲಿ ಚೆಲ್ಲಾಟವಾಡುವ ಇಂತಹ ಯೋಜನೆ ಬೇಡ ಎಂದರು.
ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಮಾಜಿ ಸಚಿವ ವಿನಯಕುಮಾರ ಸೊರಕೆ, ಪರಿಸರ ಹೋರಾಟಗಾರ ಪ್ರೇಮಾನಂದ ಕಲ್ಮಾಡಿ, ನಂದಳಿಕೆ ಟೋಲ್‌ಗೇಟ್ ಹೋರಾಟ ಸಮಿತಿಯ ಆಧ್ಯಕ್ಷ ಸುಹಾಸ್ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲೆಯ ಕಿಸಾನ್ ಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ, ಮನೋಹರ್ ಶೆಟ್ಟಿ, ರಾಜು ಗೌಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮತ್ತಿತರರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಇನ್ನಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಿತಾ ಶೆಟ್ಟಿ, ವಿವಿಧ ಪಕ್ಷದ ಪ್ರಮುಖರು, ಸಾರ್ವಜನಿಕರು ಉಪಸ್ಥಿತರಿದ್ದರು.