ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ನವದುರ್ಗಾ ಲೇಖನ ಯಜ್ಞ ಸಮಿತಿಯ ನೇತೃತ್ವದಲ್ಲಿ ನವದುರ್ಗಾ ಲೇಖನ ಯಜ್ಞ ಪೂರ್ವಭಾವಿಯಾಗಿ ನವದಿನಗಳ ಕಾಲ ಹಮ್ಮಿಕೊಂಡಿರುವ 108 ತಂಡಗಳ ಭಜನಾ ಸಂಕೀರ್ತನೆಗೆ ರವಿವಾರ ಚಾಲನೆ ನೀಡಲಾಯಿತು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಪ್ರಸ್ತಾವನೆಗೈದು ಮಾತನಾಡಿ, ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಪ್ರಗತಿಯಲ್ಲಿ ಸಾಗುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೂ ಈಗಿನಿಂದಲೇ ಸಿದ್ಧತೆಗಳು ಪ್ರಾರಂಭಗೊಂಡಿವೆ. ಅದಕ್ಕೆ ಪೂರ್ವಭಾವಿಯಾಗಿ ನವದುರ್ಗಾ ಲೇಖನ ಯಜ್ಞವನ್ನು ಹಮ್ಮಿಕೊಂಡಿದ್ದು ಪ್ರಪಂಚದಾದ್ಯಂತ ಇರುವ ಭಕ್ತರನ್ನು ನವದುರ್ಗಾ ಲೇಖನ ಬರೆಯುವ ಮಹಾಸಂಕಲ್ಪದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲಾಗುತ್ತಿದೆ ಎಂದರು.
ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ಮಾತನಾಡಿ, ಕಾಪು ಮಾರಿಯಮ್ಮನ ಸನ್ನಿಧಿಯ ಜೀರ್ಣೋದ್ಧಾರ ನಮ್ಮ ಜೀವನದಲ್ಲಿ ದೊರಕಿರುವ ಸುವರ್ಣಾವಕಾಶವಾಗಿದೆ. ನವದುರ್ಗಾ ಲೇಖನ ಯಜ್ಞದ ಮೂಲಕ ಎಲ್ಲಾ ಭಕ್ತರಿಗೂ ಅಮ್ಮನ ಸೇವೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ದಾವಣಗೆರೆ, ಹುಬ್ಬಳ್ಳಿ, ಶಿವಮೊಗ್ಗ, ಮುಂಬಯಿ ಸಹಿತ ವಿವಿಧೆಡೆ ಸಭೆ ನಡೆಸಿ ಜನರನ್ನು ಜಾಗೃತಿಗೊಳಿಸಲಾಗುತ್ತಿದ್ದು, ಎಲ್ಲೆಡೆ ಪೂರಕ ಸ್ಪಂಧನೆ ದೊರಕುತ್ತಿದೆ ಎಂದರು.
ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ನವದುರ್ಗಾ ಲೇಖನಯಜ್ಞದ ಸಿದ್ಧತೆ ಮತ್ತು ಭಜನಾ ಸಂಕೀರ್ತನೆ ಕುರಿತಾಗಿ ಮಾಹಿತಿ ನೀಡಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷರಾದ ಮನೋಹರ ಶೆಟ್ಟಿ, ಮಾಧವ ಆರ್. ಪಾಲನ್, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಕಾರ್ಯಾಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಪದಾಧಿಕಾರಿಗಳಾದ ಕೃಷ್ಣ ಪ್ರಸಾದ್ ಅಡ್ಯಂತಾಯ, ಅಶೋಕ್ ಕುಮಾರ್ ಶೆಟ್ಟಿ, ಕೆ. ವಿಶ್ವನಾಥ್, ಹರಿಯಪ್ಪ ಸಾಲ್ಯಾನ್, ಸಂದೀಪ್ ಕುಮಾರ್ ಮಂಜ, ಪ್ರಮುಖರಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ಮೋಹನ್ ಬಂಗೇರ, ಶ್ರೀಧರ ಕಾಂಚನ್, ಗೀತಾಂಜಲಿ ಸುವರ್ಣ, ಸಾವಿತ್ರಿ ಗಣೇಶ್, ಶ್ರೀಕರ ಶೆಟ್ಟಿ ಕಲ್ಯ , ಬೀನಾ ವಿ. ಶೆಟ್ಟಿ, ಅನುರಾಧ ಶೆಟ್ಟಿ, ಪ್ರತಿಮಾ ಶೆಟ್ಟಿ, ಹರಿಣಾಕ್ಷಿ ದೇವಾಡಿಗ, ಸರಿತಾ ಶಿವಾನಂದ್, ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್, ಸಂತೋಷ್ ಶೆಟ್ಟಿ ಮೂಡುಶೆಡ್ಡೆ, ರಮೇಶ್ ಕಲ್ಮಾಡಿ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಸುವರ್ಧನ್ ಉಡುಪಿ ಮೊದಲಾದವರು ಉಪಸ್ಥಿತರಿದ್ದರು.