ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂದರ್ಭ ವಿವಿಧ ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.
ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ಅವರು ಜೀರ್ಣೋದ್ಧಾರ ಕಾರ್ಯ ನಡೆದು ಬಂದ ದಾರಿ, ವಿವಿಧ ವ್ಯವಸ್ಥೆಗಳ ಜೋಡಣೆ ಬಗ್ಗೆ ಮಾಹಿತಿ ನೀಡಿದರು.
ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಮಾತನಾಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪ್ರಪಂಚದಾದ್ಯಂತ ಲಕ್ಷಾಂತರ ಮಂದಿ ಭಕ್ತರು, ಮುಖ್ಯಮಂತ್ರಿಗಳಾದಿಯಾಗಿ ರಾಜ್ಯ ಮತ್ತು ಕೇಂದ್ರ ಸಚಿವರುಗಳ ಸಹಿತ ವಿವಿಧ ಗಣ್ಯರು, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ. ಸುಸಜ್ಜಿತ ವ್ಯವಸ್ಥೆಗಳ ಜೋಡಣೆ ಜಿಲ್ಲಾಡಳಿತ, ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಪುರಸಭೆ ಸಹಿತ ವಿವಿಧ ಇಲಾಖೆಗಳು ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯೊಂದಿಗೆ ಕೈ ಜೋಡಿಸಲಿದೆ ಎಂದರು. ಪೊಲೀಸ್ ಇಲಾಖೆಯು ಪೂರ್ಣ ಸಹಕಾರ ನೀಡಲಿದೆ ಎಂದರು.
ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಪರಮೇಶ್ವರ ಎ. ಹೆಗಡೆ, ಎಸ್. ಟಿ. ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಜಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಮ್ಯಾನೇಜರ್, ತಹಶೀಲ್ದಾರ್ ಡಾ| ಪ್ರತಿಭಾ ಆರ್., ಪುರಸಭೆ ಮುಖ್ಯಾಧಿಕಾರಿ ನಾಗರಾಜ್ ಸಿ., ವೃತ್ತ ನಿರೀಕ್ಷಕಿ ಜಯಶ್ರೀ ಎಸ್. ಮಾನೆ, ಕಾಪು ಎಸ್ಸೈ ತೇಜಸ್ವಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಲಾಲಾಜಿ ಆರ್. ಮೆಂಡನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸಹಾಯಕ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ, ಸಮಿತಿ ಉಪಾಧ್ಯಕ್ಷರಾದ ಮನೋಹರ ಶೆಟ್ಟಿ, ಮಾಧವ ಆರ್. ಪಾಲನ್, ಕಾಪು ದಿವಾಕರ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ಸಾಲ್ಯಾನ್, ಜಯಲಕ್ಷ್ಮೀ ಶೆಟ್ಟಿ, ಚರಿತಾ ದೇವಾಡಿಗ, ಮನೋಹರ ರಾವ್ ಮೊದಲಾದವರು ಉಪಸ್ಥಿತರಿದ್ದರು.