ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಫೆ. 4 : ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ

Posted On: 29-01-2025 07:24PM

ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಫೆಬ್ರವರಿ 4ರ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ಜರಗಲಿದೆ ಎಂದು ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ, ಮಾಜಿ ಶಾಸಕ ರಘುಪತಿ ಭಟ್‌ ಹೇಳಿದ್ದಾರೆ. ಅವರು ಕಾಪುವಿನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಫೆಬ್ರವರಿ 4ರಂದು ಬೆಳಿಗ್ಗೆ ನವಚಂಡೀಯಾಗ ಆರಂಭ, ಕಲ್ಲೋಕ್ತ ಪೂಜಾ, 11 ಗಂಟೆಗೆ ಪೂರ್ಣಾಹುತಿ, ಧಾರ್ಮಿಕ ಸಭಾ ಕಾರ್ಯಕ್ರಮ, ವಾಗೀಶ್ವರಿ ಪೂಜೆ, ಮಹಾಮಂಗಳಾರತಿ, ಮಹಾಪ್ರಸಾದ ವಿತರಣೆ ಹಾಗೂ ಮದ್ಯಾಹ್ನ 1 ರಿಂದ ಅನ್ನಪ್ರಸಾದ ವಿತರಣೆ ನಡೆಯಲಿದೆ. ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ನೇತೃತ್ವದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಮತ್ತು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ ಹಾಗೂ ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್ ಉಪಸ್ಥಿತಿಯಲ್ಲಿ ಈ ಎಲ್ಲಾ ಕಾರ್ಯಕ್ರಮ ಕಾರ್ಯಕ್ರಮಗಳು ಜರಗಲಿವೆ.  ಆ ಪ್ರಯುಕ್ತ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ  ಸಚಿವರಾದ ಡಾ. ರಾಮಲಿಂಗ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶಾಸಕರಾದ ಡಾ. ಮಂಜುನಾಥ್ ಭಂಡಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ವೆಂಕಟೇಶ್ ಐಎಎಸ್ ಗೌರವ ಉಪಸ್ಥಿತರಾಗಿ ಭಾಗವಹಿಸಲಿದ್ದಾರೆ. ನವದುರ್ಗಾ ಲೇಖನ ಯಜ್ಞದಲ್ಲಿ ಪಾಲ್ಗೊಳ್ಳುವ ಉದ್ದೇಶದೊಂದಿಗೆ ಈಗಾಗಲೇ ಪುಸ್ತಕ ತೆಗೆದುಕೊಂಡು ಹೋಗಿ ಲೇಖನ ಬರೆಯುತ್ತಿರುವವರು ಜನವರಿ 30ರ ಒಳಗಾಗಿ ಪುಸ್ತಕವನ್ನು ದೇವಳಕ್ಕೆ ಸಮರ್ಪಿಸಿ, ಫೆಬ್ರವರಿ 4 ರಂದು ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ನಡೆಯುವ ನವಚಂಡೀಯಾಗದ ಸಂಕಲ್ಪದಲ್ಲಿ ಭಾಗಿಯಾಗಬೇಕು.

ಸಂಕಲ್ಪಕ್ಕೆ ಕುಳಿತುಕೊಳ್ಳುವವರು ಬೆಳಿಗ್ಗೆ 9 ಗಂಟೆಗೆ ತಪ್ಪದೇ ಹಾಜರಿರಬೇಕು. ಲೇಖನ ಬರೆಯಲು ಇಚ್ಚಿಸುವ ಭಕ್ತರು ಆದಷ್ಟು ಶೀಘ್ರದಲ್ಲಿ ಲೇಖನ ಪುಸ್ತಕವನ್ನು ಪಡೆದು ಲೇಖನ ಬರೆದು ಶಿಲಾಸೇವೆ ಸಹಿತವಾಗಿ ಕಾಪುವಿನ ಅಮ್ಮನಿಗೆ ಸಮರ್ಪಿಸಲು ಅವಕಾಶವಿದೆ.  ಆ ಪ್ರಯುಕ್ತ 9 ಮತ್ತು ಅದಕ್ಕಿಂತ ಹೆಚ್ಚಿನ ಶಿಲಾಸೇವೆ ನೀಡುವ ಭಕ್ತರಿಗೆ “ಕಾಪುವಿನ ಅಮ್ಮನ ಮಕ್ಕಳು” ತಂಡಕ್ಕೆ ಸೇರ್ಪಡೆಗೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದೂ ರಘುಪತಿ ಭಟ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್‌ ವಿ. ಶೆಟ್ಟಿ, ಕೋಶಾಧಿಕಾರಿ ಕೆ ವಿಶ್ವನಾಥ್‌, ಉಪಾಧ್ಯಕ್ಷ ಹರಿಯಪ್ಪ ಕೋಟ್ಯಾನ್‌, ಸಂಚಾಲಕ ಸುವರ್ಧನ್‌ ನಾಯಕ್‌, ಮಹಿಳಾ ಪ್ರಧಾನ ಸಂಚಾಲಕಿ ಗೀತಾಂಜಲಿ ಎಂ ಸುವರ್ಣ, ಸಂಚಾಲಕಿ ಸಾವಿತ್ರಿ ಗಣೇಶ್‌, ಸಂಘಟನಾ ಕಾರ್ಯದರ್ಶಿ ಸಂದೀಪ್‌ ಕುಮಾರ್‌ ಮಂಜ ಉಪಸ್ಥಿತರಿದ್ದರು.