ಉಡುಪಿಯನ್ನು ಮಕ್ಕಳ ಸ್ನೇಹಿ ಜಿಲ್ಲೆಯಾಗಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್
Posted On:
13-11-2020 06:29PM
ಉಡುಪಿ : ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರ ಮೂಲಕ ಉಡುಪಿ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ, ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತೀ ಸಪ್ತಾಹ ಅಂಗವಾಗಿ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಭಿಕ್ಷಾಟನೆ ನಿರ್ಮೂಲನೆ ಮತ್ತು ಚೈಲ್ಡ್ ಲೈನ್ ಸೇವೆಗಳ ಬಗೆಗಿನ ಮಾಹಿತಿ ಅಭಿಯಾನ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿರುವ ಮಕ್ಕಳು ಬಾಲ ಕಾರ್ಮಿಕ ಪದ್ಧತಿ, ಭಿಕ್ಷಾಟನೆಯಲ್ಲಿ ತೊಡಗಿಕೊಳ್ಳದಂತೆ ನೋಡಿಕೊಳ್ಳಬೇಕು. ಅಂತಹ ಮಕ್ಕಳು ಸಿಕ್ಕಿದಲ್ಲಿ ಅವರಿಗೆ ವಸತಿ ಶಾಲೆಗಳಲ್ಲಿ ಶಿಕ್ಷಣಕ್ಕೆ ವ್ಯವಸ್ಥೆ ಮಾಡಬೇಕು. ವಲಸೆ ಕಾರ್ಮಿಕರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಈ ರೀತಿಯ ಪಿಡುಗುಗಳಿಗೆ ಬಲಿಯಾಗುತ್ತಿದ್ದು, ವಲಸೆ ಕಾರ್ಮಿಕರಿಗೆ ಈ ಕುರಿತು ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸುವ ಮೂಲಕ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮಾತನಾಡಿ, ಕೋವಿಡ್-19 ನ ಈ ಅವಧಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ನಡೆಯುವ ಸಾಧ್ಯತೆಗಳಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆ ಆಲಿಸಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆ ಕಂಡುಬAದಲ್ಲಿ ಸಾರ್ವಜನಿಕರು 1098 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದರು. ಮಕ್ಕಳ ಹಕ್ಕುಗಳ ಕುರಿತು ಪೋಸ್ಟರ್‌ನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್ ಆಚಾರ್, ಬಿ.ಕೆ ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು. ಚೈಲ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.