ಜಲ್ಲಿಕಲ್ಲು ಹಾಗೂ ಶಿಲೆಗಳ ಸಾಗಾಟಕ್ಕೆ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿಯಿಂದ ಅಧಿಕಾರಿಗಳಿಗೆ ಸೂಚನೆ
Posted On:
25-03-2021 04:03PM
ಇಂದು ಉಡುಪಿ ಶಾಸಕರಾದ ರಘುಪತಿ ಭಟ್ ಹಾಗೂ ದಕ್ಷಿಣ ಕನ್ನಡ ಶಾಸಕರಾದ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಲಾರಿ ಮಾಲಕರು, ಕ್ರಷರ್ ಮಾಲಕರು, ಕಟ್ಟಡ ಸಾಮಾಗ್ರಿ ಲಾರಿ ಟೆಂಪೋ ಮಾಲಕರ ಸಂಘದ ಪದಾಧಿಕಾರಿಗಳ ನಿಯೋಗ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲುಗಳ ಸಾಗಾಟಕ್ಕೆ ನಿರ್ಬಂಧ ಹೇರಿರುವ ಕಾರಣ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿರುವ ಕುರಿತು ಚರ್ಚೆ ನಡೆಯಿತು.
ಜಲ್ಲಿಕಲ್ಲು ಸಿಗದೆ ಅನೇಕ ಕಾಮಗಾರಿಗಳು ಸ್ಥಗಿತವಾಗಿದೆ. ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಇದರಿಂದ ವಿಪರೀತ ಸಮಸ್ಯೆಯಾಗುತ್ತಿದೆ. ಹಾಗಾಗಿ ನಿರ್ಬಂಧ ತೆರವುಗೊಳಿಸುವಂತೆ ನಿಯೋಗವು ಗಣಿ ಹಾಗೂ ಭೂ ವಿಜ್ಞಾನ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸಮಸ್ಯೆ ಆಲಿಸಿದ ಸಚಿವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸಿ ಸಮಸ್ಯೆಯ ಕುರಿತು ಗಮನ ಸೆಳೆದರು.
ಸಮಸ್ಯೆಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲು ಸಾಗಾಟಕ್ಕೆ ಅವಕಾಶ ನೀಡುವ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.